ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ 198 ಮನೆಗಳಿಗೆ ಹಾನಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 26 ರ ಬೆಳಿಗ್ಗೆ 8 ಗಂಟೆಯಿಂದ 27 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಧಾರವಾಡ ತಾಲೂಕಿನಲ್ಲಿ 87, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 5 ಮತ್ತು 2 ತೀವ್ರ, ಕಲಘಟಗಿ ತಾಲೂಕಿನಲ್ಲಿ 45, ಕುಂದಗೋಳ ತಾಲೂಕಿನಲ್ಲಿ 26, ನವಲಗುಂದ ತಾಲೂಕಿನಲ್ಲಿ 10 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 8 ಸೇರಿದಂತೆ ಜಿಲ್ಲೆಯ 8 ತಾಲೂಕಗಳಲ್ಲಿನ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.
ಈ ಎಲ್ಲ ಪ್ರಕರಣ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನೀರಿಕ್ಷಕರು ತಹಶೀಲ್ದಾರರಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ತನಿಖಾ ತಂಡದಿಂದ ಪರಿಶೀಲನೆ ಕಾರ್ಯ ಜರುಗಿಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸುವಲ್ಲಿ ಸರ್ಕಾರದ ನಿಯಮಾವಳಿಗಳಂತೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಹಾಗೂ ನಗರಗಳಲ್ಲಿ ಮಳೆಯಿಂದಾಗಿ ಏಪ್ರಿಲ್ 01 ರಿಂದ ಜುಲೈ 27ರವರೆಗೆ 677 ಮನೆಗಳಿಗೆ ಭಾಗಶಃ ಹಾಗೂ 15 ಮನೆಗಳಿಗೆ ತೀವ್ರತರವಾಗಿ ಹಾನಿಯಾಗಿದೆ. ಒಟ್ಟಾರೆ ಇಲ್ಲಿಯವರೆಗೆ ಸುಮಾರು 692 ಮನೆಗಳಿಗೆ ಹಾನಿಯಾಗಿದ್ದು, ಈ ಕುರಿತು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ವರದಿ ಸಲ್ಲಿಸಿದ ನಂತರ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.