ಬೆಂಗಳೂರು ಮಳೆ ಅನಾಹುತ : ಪರಿಹಾರ ಕಾರ್ಯಕ್ಕೆ 1 ಸಾವಿರ ಕೋಟಿ ರೂ. ಬಿಡುಗಡೆಗೆ ಆರ್ ಅಶೋಕ್ ಆಗ್ರಹ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸುರುವ ಅವರು, ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ "ಬ್ರಾಂಡ್ ಬೆಂಗಳೂರು"ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.