ಹುಬ್ಬಳ್ಳಿ: ಚನ್ನಮ್ಮ ವೃತ್ತಕ್ಕೆ ಸೀಮಿತವಾಯ್ತಾ ರೈತರ ಪ್ರತಿಭಟನೆ: ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಭಾರತ್ ಬಂದ್ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದಲ್ಲಿ ಎಂದಿನಂತೆ ವಾಹನ ಸಂಚಾರ ಸಾಮಾನ್ಯವಾಗಿದೆ. ಅಂಗಡಿಗಳಲ್ಲಿ ವ್ಯಾಪಾರ ವಹಿವಾಟುಗಳು ಯಥಾಸ್ಥಿತಿ ಯಲ್ಲಿ ಮುಂದುವರೆದಿದೆ. ಇನ್ನು ಬಂದ್ ಜನಸಾಮಾನ್ಯರ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ರೈತ ಹಾಗೂ ಇತರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಎಐಟಿಯುಸಿ ಇಂದಿರಾ ಗಾಜಿನಮನೆಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಚನ್ನಮ್ಮ ವೃತ್ತಕ್ಕೆ ಆಗಮಿಸಿ, ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇನ್ನು ಆಮ್ ಆದ್ಮಿ ಪಕ್ಷ ಕೂಡಾ ಭಾರತ ಬಂದ್ ಗೆ ಬೆಂಬಲ ನೀಡಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆಯುವಂತೆ ಆಗ್ರಹಿಸಿ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇದಲ್ಲದೇ ಹಲವಾರು ಸಂಘಟನೆಗಳು ಬಂದ್ ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದವು. ಆದರೆ, ಜನ ಜೀವನಕ್ಕೆ ತೊಂದರೆಯಾಗುವಂತೆ ಬಂದ್ ನಡೆದಿದೆ. ಸರ್ಕಾರಕ್ಕೆ ಅದರ ಬಿಸಿ ತಟ್ಟಲಿಲ್ಲ.