ವಿದೇಶಾಂಗ ನೀತಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೇಂದ್ರದ ನರೇಂದ್ರ ಮೋದಿ ಸರ್ಕಾರ ವಿದೇಶಾಂಗ ನೀತಿಯಲ್ಲಿ ಸಂಪೂರ್ಣವಿಫಲವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುವ ಮುನ್ಸೂಚನೆ ಇತ್ತು. ಇದನ್ನು ಅರಿತು ಕೇಂದ್ರ ಸರ್ಕಾರ ಉಕ್ರೇನ್‌ನಲ್ಲಿದ್ದ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಬೇಕಿತ್ತು. ತಕ್ಷಣ ಕಾರ್ಯಪ್ರವೃತ್ತವಾಗದ ಕಾರಣ ಉಕ್ರೇನ್‌ನಲ್ಲಿದ್ದ ನಮ್ಮವರು ಸಂಕಷ್ಟ ಎದುರಿಸುವಂತಾಗಿದೆ ಎಂದ ಹರಿಪ್ರಸಾದ್ ‘ಹಿಂದೆ ಅಲಿಪ್ತ ರಾಷ್ಟ್ರಗಳ ಕೂಟದ ನೇತೃತ್ವ ವಹಿಸಿದ್ದ ಜವಹರಲಾಲ್ ನೆಹರೂ ಅವರ ವಿದೇಶಾಂಗ ನೀತಿಯನ್ನು ಇಂದು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ’ ಎಂದರು.