ಬೆಂಗಳೂರು : ಬಾಣಂತಿಯರ ಸರಣಿ ಸಾವು ಪ್ರಕರಣ - ಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಾಣಂತಿಯರ ಸರಣಿ ಸಾವು ಪ್ರಕರಣ - ಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ರು. 

ಬಳ್ಳಾರಿಯ ಜಿಲ್ಲಾಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಅಧಿಕಾರಿಗಳಿಂದ ವಿವರಣೆ ಪಡೆದುಕೊಂಡರು ಈ ವೇಳೆ ಘಟನೆ ಕುರಿತು ಅಧಿಕಾರಿಯೋರ್ವರು ಕೊಟ್ಟ ವಿವರಣೆಗೆ ಸಿಎಂ ಗರಂ ಆಗಿದ್ದಾರೆ ಅಲ್ದೇ ಸಭೆಯಲ್ಲಿ ಅಧಿಕಾರಿಯನ್ನ ತರಾಟೆಗೆ ತಗೆದುಕೊಂಡ ಸಿಎಂ ನೀನೇನು ಮಹಾರಾಜನೇನಪ್ಪಾ ಅಂತ ಗರಂ ಆಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 

ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪಕ್ಕೆ ಡ್ರಗ್ ಕಂಟ್ರೋಲರ್ ಸಸ್ಪೆಂಡ್ ಮಾಡಿ ಎಂದು ಸಿಎಂ ನಿರ್ದೇಶಿಸಿದರು ಅಲ್ದೇ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸಿಎಂ ಆದೇಶಿಸಿದ್ದಾರೆ. 

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ಸೂಚಿಸಿದ್ದಾರೆ. ಹಾಗೇ ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚಿಸಿದ್ದಾರೆ. ಹಾಗೇ ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.