ಮತ್ತೆ ಕೋವಿಡ್ ಆತಂಕ: ಎಲ್ಲೆಡೆ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನೂತನ ಕೊರೊನಾ ರೂಪಾಂತರ ತಳಿ ಪತ್ತೆಯಾಗಿದ್ದು, ಕೇರಳದ ಗಡಿ ಪ್ರದೇಶಕ್ಕೆ ಹೊಂದಿಕೊಂಡಂತಿರೋ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಸರ್ಕಾರ ಸಂಬಂಧಿಸಿದ ಇಲಾಖೆಗೆ ಸೂಚಿಸಿದ ಬೆನ್ನಲ್ಲೇ ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.
ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಆಯುಕ್ತ ಡಿ.ರಂದೀಪ್ ಅವರು ಈ ಬಗ್ಗೆ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಎಲ್ಲ ಜಿಲ್ಲಾ ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧ ಹಂತದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವನೀಯ ಕೊರೊನಾ ಸೋಂಕಿತರಿಗೆ ಅಗತ್ಯ ಸೌಲಭ್ಯಗಳನ್ನು ಮತ್ತೆ ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.