ಧಾರವಾಡ: ಜನನ, ಮರಣಗಳನ್ನು ನಿಗದಿತ ಅವಧಿಯೊಳಗೆ ನೋಂದಣಿ ಮಾಡಲು ಡಿಸಿ ಸೂಚನೆ

ಧಾರವಾಡ: ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜರುಗುವ ಜನನ, ಮರಣ ಘಟನೆಗಳನ್ನು ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ 21 ದಿನಗಳ ನಿಗದಿತ ಅವಧಿಯೊಳಗೆ ನೋಂದಣಿ ಕಾರ್ಯ ಕೈಗೊಳ್ಳಬೇಕು. ಯಾವುದೇ ತಡ ನೋಂದಣಿಗೆ ಅವಕಾಶ ನೀಡದೇ ಸಾರ್ವಜನಿಕರಿಗೆ ಜನನ, ಮರಣದ ಮೊದಲನೇ ಪ್ರತಿಯನ್ನು ಉಚಿತವಾಗಿ ನೀಡುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ಜರುಗಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರುಗುವ ಮರಣ ಘಟನೆಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತಪ್ಪದೇ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿಗಳು, ಬೆಂಗಳೂರು ಇವರಿಗೆ ನೇರವಾಗಿ ಸಲ್ಲಿಸುವಂತೆ ಹಾಗೂ ಯಾವುದೇ ಮರಣ ಘಟನೆ ಜರುಗದೇ ಇರುವ ಪಕ್ಷದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ಜನನ, ಮರಣಗಳ ವಿವರಗಳನ್ನು ಆನ್‍ಲೈನ್‍ದಲ್ಲಿ ದಾಖಲಿಸಲು ತಿಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಅವರು ತಿಳಿಸಿದರು ಮತ್ತು ಜನನ ಮರಣ ನೋಂದಣಿ ಕಾರ್ಯವನ್ನು ವೈದ್ಯಕೀಯ ಸಂಸ್ಥೆಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಗಮನಹರಿಸುವಂತೆ ಸೂಚಿಸಿದರು.