ಧಾರವಾಡ:ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ: ನಾಮಪತ್ರ ಸ್ವೀಕಾರಕ್ಕೆ ಚಾಲನೆ

ಧಾರವಾಡ: ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕರ್ನಾಟಕ ಪಶ್ಚಿಮ ಶಿಕ್ಷಕರ ಚುನಾವಣಾ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಓರ್ವ ಸದಸ್ಯರ ಚುನಾವಣೆಗೆ ನಾಮಪತ್ರಗಳನ್ನು ಸ್ವೀಕರಿಸುವ ಪ್ರಕ್ರಿಯೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಾರಂಭವಾಗಿದೆ.
ಉಮೇದುವಾರರು ಅಥವಾ ಅವರ ಸೂಚಕರು, ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿಗಳಿಗೆ ಇಂದು ಮೇ 19 ರಿಂದ ಮೇ 26 ಗುರುವಾರದವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ಘಂಟೆಯಿಂದ ಮಧ್ಯಾಹ್ನ 3 ಘಂಟೆಯೊಳಗೆ ನಾಮಪತ್ರಗಳನ್ನು ಸಲ್ಲಿಸಬಹುದು.
ನಾಮ ಪತ್ರದ ನಮೂನೆಗಳನ್ನು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪಡೆದುಕೊಳ್ಳಬಹುದು.
ನಾಮಪತ್ರಗಳನ್ನು ಮೇ.27 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಿಗ್ಗೆ 11 ಘಂಟೆಗೆ ಪರಿಶೀಲಿಸಲಾಗುವುದು.
ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಉಮೇದುವಾರ, ಅವರ ಸೂಚಕರು ಅಥವಾ ಅಧಿಕೃತ ಚುನಾವಣಾ ಏಜೆಂಟರು ಚುನಾವಣಾಧಿಕಾರಿಗಳಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮೇ. 30 ಸೋಮವಾರ ಮಧ್ಯಾಹ್ನ 3 ಗಂಟೆಯೊಳಗೆ ತಿಳುವಳಿಕೆ ಪತ್ರ ಸಲ್ಲಿಸಬಹುದು.
ಅವಶ್ಯವಿದ್ದರೆ ಜೂನ್ 13, ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.