ಧಾರವಾಡ: SSLC ಪರೀಕ್ಷೆ ಪಾರದರ್ಶಕವಾಗಿರಲಿ, ಸಿಬ್ಬಂದಿ ನಿಯಮಾನುಸಾರ ತಮ್ಮ ಕರ್ತವ್ಯ ನಿರ್ವಹಿಸಿ - ಡಿಸಿ ಸೂಚನೆ

ಧಾರವಾಡ: ಮಾರ್ಚ್ 21 ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಅತ್ಯಂತ ಪಾರದರ್ಶಕವಾಗಿ ಮತ್ತು ವಿದ್ಯಾರ್ಥಿಗಳಿಗೆ ಉತ್ತಮವಾದ ವಾತಾವರಣದಲ್ಲಿ ಜರುಗಬೇಕು. ಯಾವುದೇ ರೀತಿಯ ಮಾಲ್‍ಪ್ರಾಕ್ಟೀಸ್‍ಗೆ ಅವಕಾಶವಾಗದಂತೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಸಭೆ ಜರುಗಿಸಿ ಅವರು ಮಾತನಾಡಿದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲ ಸೌಕರ್ಯ, ಸಿ.ಸಿ.ಟಿವಿ ಕಲ್ಪಿಸುವುದನ್ನು ಮೇಲಾಧಿಕಾರಿಗಳು ಖಾತರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೆಬ್‍ಕಾಸ್ಟಿಂಗ್ ಕಡ್ಡಾಯವಾಗಿದ್ದು, ವೆಬ್‍ಕಾಸ್ಟಿಂಗ್‍ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತಾವು ಪ್ರವಾಸ ಮಾಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ್ದು, ವಿದ್ಯಾರ್ಥಿಗಳು ಯಾವುದೇ ಭಯ ಭೀತಿ ಇಲ್ಲದೇ, ಖುಷಿಯಿಂದ ಪರೀಕ್ಷೆ ಬರೆಯುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿನ ಬದಲಾವಣೆ ನೋಡಿ ಸಂತಸವಾಗಿದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಮಯದಲ್ಲಿ ಅನ್ಯ ವ್ಯಕ್ತಿಗಳು, ಸಂಬಂಧಪಡದವರು, ಮಾಧ್ಯಮಗಳಿಗೆ ಪ್ರವೇಶವಿರುವುದಿಲ್ಲ. ವಿದ್ಯಾರ್ಥಿಗಳು ಶಾಂತ ರೀತಿಯಿಂದ ಮುಕ್ತವಾಗಿ ಪರೀಕ್ಷೆ ಬರೆಯುವಂತೆ ವಾತಾವರಣ ಇರಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 144 ಕಲಂ ಜಾರಿ ಇರುತ್ತದೆ. ನಿಯೋಜಿತರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕೆಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಪರೀಕ್ಷಾ ಸಿದ್ಧತೆ, ಪರೀಕ್ಷಾ ಕೇಂದ್ರಗಳಲ್ಲಿ ಸೌಕರ್ಯ, ಸಿ.ಸಿ.ಟಿವಿ ಅಳವಡಿಕೆ ಸೇರಿದಂತೆ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.