ಆಗಸ್ಟ್ 13 ರಂದು ಹುಬ್ಬಳ್ಳಿಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ

ಆಗಸ್ಟ್ 13 ರಂದು ಹುಬ್ಬಳ್ಳಿಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ

ಧಾರವಾಡ : ಸರ್ಕಾರದ ಆದೇಶದಂತೆ ಬರುವ ಆಗಸ್ಟ್ 13 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈಗಾಗಲೇ ಜಿಲ್ಲಾ ಮಟ್ಟದ ಐದು ಜನ ಸಂಪರ್ಕ ಸಭೆಗಳನ್ನು ಸಂಘಟಿಸಲಾಗಿದ್ದು, 1972 ಮನವಿ, ಕುಂದು, ಕೊರತೆಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 1842 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಮುಖ್ಯಮಂತ್ರಿಗಳ ಜನತಾ ದರ್ಶನಗಳಲ್ಲಿ ಸ್ವೀಕೃತವಾಗಿದ್ದ 215 ಮನವಿ ಹಾಗೂ ಕುಂದುಕೊರತೆಗಳ ಪೈಕಿ 212 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ ಮೂರು ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಜನ ಸಂಪರ್ಕ ಕಾರ್ಯಕ್ರಮವನ್ನು ಆಗಸ್ಟ್ 13 ರ ಬೆಳಿಗ್ಗೆ 11 ಕ್ಕೆ ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್‌ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಮನವಿ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.