ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದಿವ್ಯಪ್ರಭು ಜಿ.ಆರ್.ಜೆ ಅವರು ನಿನ್ನೆ ಸಂಜೆ ಅಧಿಕಾರ ಸ್ವೀಕರಿಸಿದರು. 

ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದ ಗುರುದತ್ತ ಹೆಗಡೆ ಅವರು ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ದಿವ್ಯಪ್ರಭು ಜೆ.ಆರ್.ಜಿ ಅವರನ್ನು ನೇಮಕಗೊಳಿಸಿ, ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು. 

ತಮಿಳುನಾಡು ಮೂಲದ ದಿವ್ಯಪ್ರಭು ಅವರು 2014 ನೇ ಸಾಲಿನ ಐಎಎಸ್ ಅಧಿಕಾರಿ ಆಗಿದ್ದು, ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. 

ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿರುವ ಇವರು, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 

ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ದಿವ್ಯಪ್ರಭು ಅವರು, ಸರ್ಕಾರದ ಆದೇಶದಂತೆ ನಿನ್ನೆ ಸಂಜೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 

ದಿವ್ಯಪ್ರಭು ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಾಗಿದ್ದಾಗ ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿಯನ್ನು ಮತ್ತು ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಇವರ ನೇತೃತ್ವದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಉತ್ತಮ ಸಾಧನೆ ಮಾಡಿದ್ದರಿಂದ ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. 

ಜನಪರ ಕರ್ತವ್ಯ ನಿರ್ವಹಣೆಯ ಆಶಯದ ನೂತನ ಜಿಲ್ಲಾಧಿಕಾರಿಗಳು ಆರೋಗ್ಯ, ಶಿಕ್ಷಣ, ಗ್ರಾಮೀಣ ಅಭಿವೃದ್ದಿ, ಮಹಿಳೆಯರ, ದುರ್ಬಲವರ್ಗದವರ ಏಳಿಗೆಯಯೊಂದಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಿ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ನೌಕರರ, ಸಾರ್ವಜನಿಕರ ಸಹಕಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.