ಬೆಂಗಳೂರು: ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ರಜೆ ನೀಡಲು ಸೂಚನೆ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಬೇಕು. ಇದರೊಂದಿಗೆ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ಕೊಟ್ಟಿದ್ದಾರೆ.
ಎಲ್ಲಾ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಲು ಈಗಾಗಲೇ ಸರ್ಕಾರ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗಿದ್ದು, ಅದಕ್ಕೆ ಎಲ್ಲಾ ಸಂಸ್ಥೆಗಳು ಒಪ್ಪಿಕೊಂಡಿದ್ದಾರೆ. ಅಲ್ಲದೆ ಆಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತಪ್ಪದೆ ಮತ ಚಲಾಯಿಸಲು ಅರಿವು ಮೂಡಿಸುವ ಕೆಲಸ ಮಾಡಲು ತಿಳಿಸಲಾಗಿದೆ ಎಂದರು.
ಸಾಕಷ್ಟು ಸಿಬ್ಬಂದಿಯು ಐಟಿ-ಬಿಟಿ ಸಂಸ್ಥೆಗಳಲ್ಲಿ ಬೇರೆ ರಾಜ್ಯಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿ ಮತದಾನದ ಹಕ್ಕನ್ನು ಹೊಂದಿರುವುದಿಲ್ಲ. ಇನ್ನು ಕೆಲವರು ಮನೆಯಿಂದ ಕೆಲಸ ಮಾಡುತ್ತಿರುವ ಕಾರಣ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಸಾಧ್ಯವಾಗುವುದಿಲ್ಲ. ಅದಲ್ಲದೆ ಮತಗಟ್ಟೆಗಳಲ್ಲಿ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂಬ ಮನೋಭಾವಿರುತ್ತದೆ. ಈ ಪೈಕಿ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಇರುವುದಾಗಿ ಮಾಹಿತಿ ನೀಡಲಾಗಿದ್ದು, ಈ ಬಾರಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಹೆಚ್ಚು ಮತದಾನವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.