ಧಾರವಾಡ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆ - ಸೂಕ್ತ ಕ್ರಮ ಕೈಗೊಳ್ಳಲು ಡಿಸಿ ಸೂಚನೆ

ಧಾರವಾಡ: ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ಹಾಗೂ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಅಕ್ಟೋಬರ್ 09 ರಿಂದ 16 ರವರೆಗೆ ಮಳೆಯಾಗುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ತಾಲೂಕು ಆಡಳಿತಗಳು ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಎಲ್ಲರೂ ಅವರವರ ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶಿಸಿದರು.
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ, ವಿವಿಧ ಇಲಾಖೆ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತವು ಮನ್ನೆಚ್ಚರಿಕಾ ಕ್ರಮವಾಗಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳಗಳ ಅಚ್ಚು-ಕಟ್ಟು ಪ್ರದೇಶದ ಪ್ರಸ್ತುತ ಹಾಗೂ ಮುಂದಿನ ಎರಡು ದಿನ ಸಂಭವಿಸಬಹುದಾದ ಮಳೆ ಪ್ರಮಾಣದ ವಿವರಗಳನ್ನು ರಾಜ್ಯ ಹವಾಮಾನ ಇಲಾಖೆಯಿಂದ ಪಡೆದುಕೊಂಡು ತಾಲ್ಲೂಕಿನ ಅಧಿಕಾರಿ, ಸಿಬ್ಬಂದಿಗೆ ಪ್ರತಿ ದಿನ ನೀಡಲಾಗುತ್ತಿದೆ ಮತ್ತು ಗ್ರಾಮ ಪಂಚಾಯತ ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹದ ಕುರಿತು ಗ್ರಾಮಗಳಲ್ಲಿ ಡಂಗುರ ಸಾರುವುದು ಹಾಗೂ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮಕೈಗೊಂಡಿದ್ದು, ಈ ಕಾರ್ಯಕ್ರಮಗಳಿಂದ ಜನರಲ್ಲಿ ತಿಳುವಳಿಕೆ ಮೂಡಿದೆ. ಜಿಲ್ಲೆಯಲ್ಲಿ ಯಾವುದೇ ಜೀವ ಹಾನಿಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರವಾಹದ ಕುರಿತು ಈ ಮೂಲಕವೂ ಮುನ್ನೆಚ್ಚರಿಕೆಯನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ 5 ರಕ್ಷಣಾ ತಂಡಗಳನ್ನು, 2 ಬೋಟ್, 50 ಲೈಪ್ ಜಾಕೇಟ್, 60 ಲೈಪ್ ಬಾಯ್, 150 ರೇನ್ ಕೋಟ್‍ಗಳು ಸೇರಿದಂತೆ ವಿವಿಧ ರಕ್ಷಣಾ ಸಾಮಾಗ್ರಿಗಳನ್ನು ಸಿದ್ಧತೆಯಲ್ಲಿ ಇಟ್ಟುಕೊಳ್ಳಲಾಗಿದೆ. ಅಕ್ಟೋಬರ 12 ರಂದು ಬೆಣ್ಣಿಹಳ್ಳ ಪ್ರವಾಹದಲ್ಲಿ ಸಿಲುಕಿದ್ದ (ಕಾಲವಾಡ, ಮಂಟೂರ) ಇಬ್ಬರು ವ್ಯಕ್ತಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಾಳಾಂತರಿಸಿ, ರಕ್ಷಿಸಲಾಗಿದೆ ಎಂದು ಅವರು ತಿಳಿಸಿದರು.