ಸೆ.02 ರಿಂದ ಧಾರವಾಡ ಜಿಲ್ಲೆಯಲ್ಲಿ ಎನಿವೇರ್ (Any Where) ನೋಂದಣಿ ವ್ಯವಸ್ಥೆ ಜಾರಿ: ಡಿಸಿ

ಧಾರವಾಡ: ಸಾರ್ವಜನಿಕ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಜಾರಿಗೊಳಿಸಿರುವ ಎನಿವೇರ್ (Any Where) ನೋಂದಣಿ ವ್ಯವಸ್ಥೆಯು ಧಾರವಾಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 02 ರಿಂದ ಅನುಷ್ಠಾನಗೊಳ್ಳಲಿದೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024-25 ನೇ ಸಾಲಿನ ಆಯವ್ಯಯದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿತ್ತು. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6) ರ ಅಡಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಎನಿವೇರ್ ನೋಂದಣಿ ವ್ಯವಸ್ಥೆಯು ಪ್ರಾಯೋಗಿಕವಾಗಿ ಜಾರಿಯಾದ ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಸಾರ್ವಜನಿಕರಿಗೆ ಇದು ಅನಕೂಲಕರವಾಗಿದ್ದು, ಸಾರ್ವಜನಿಕರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿರುವುದರಿಂದ ಈಗ ಧಾರವಾಡ ಜಿಲ್ಲೆಯಲ್ಲಿಯೂ ಸೆ.02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿ ಮಾಡಲು ಸರ್ಕಾರ ಆದೇಶಿಸಿದ್ದು, ಜಿಲ್ಲೆಯ ಜನರಿಗೂ ಇದು ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಧಾರವಾಡ, ಹುಬ್ಬಳ್ಳಿ (ದಕ್ಷಿಣ), ಹುಬ್ಬಳ್ಳಿ (ಉತ್ತರ), ಅಣ್ಣಿಗೇರಿ, ಕುಂದಗೋಳ, ಕಲಘಟಗಿ ಮತ್ತು ನವಲಗುಂದ ಸೇರಿದಂತೆ ಒಟ್ಟು ಏಳು ಸ್ಥಳಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೋಂದಣಿ ಕಚೇರಿಗಳನ್ನು ಹೊಂದಲಾಗಿದೆ. ಎನಿವೇರ್ ನೋಂದಣಿಯನ್ನು ಧಾರವಾಡ ಜಿಲ್ಲೆಯ ಎಲ್ಲ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲಾಗಿದೆ. ಜಿಲ್ಲೆಯ ಯಾವುದೇ ಭಾಗದ ಸ್ಥಿರಾಸ್ತಿ ದಸ್ತಾವೇಜುನ್ನು ಮಾಲೀಕರು ತಮಗೆ ಅನುಕೂಲ ಮತ್ತು ಸ್ಲಾಟ್ ಲಭ್ಯವಾಗುವ ನೋಂದಣಿ ಕಚೇರಿಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಎನಿವೇರ್ (Any Where) ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ಆಗುವ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರಿಗೆ ತಮಗೆ ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು ಅವಕಾಶ ನೀಡುತ್ತದೆ. ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯು ಸುಲಭವಾಗುವುದಲ್ಲದೆ, ಸಮಯವು ಸಹ ಉಳಿಯುತ್ತದೆ ಎಂದು ಅವರು ತಿಳಿಸಿದ್ದಾರೆ.
ಎನಿವೇರ್ ವ್ಯವಸ್ಥೆಯಿಂದ ಉಪ ನೋಂದಣಿ ಕಚೇರಿಗಳಲ್ಲಿ ಆಗುವ ಹೆಚ್ಚಿನ ಜನದಟ್ಟಣೆ ಹಾಗೂ ಕಛೇರಿ ಸಿಬ್ಬಂದಿಗಳ ಮೇಲೆ ಉಂಟಾಗುವ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ಹಾಗೂ ಎಲ್ಲ ಕಛೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.