IND vs WI 2nd ODI: ಟೀಂ ಇಂಡಿಯಾ ಸೇರಿದ ಮೂವರು ಆಟಗಾರರು

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ತಂಡವು ಶುಭಾರಂಭ ಮಾಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನಡೆಯುತ್ತಿದ್ದು, ಭಾರತವು ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ದ್ವಿತೀಯ ಏಕದಿನ ಪಂದ್ಯಕ್ಕೆ ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್ ಹಾಗೂ ನವದೀಪ್ ಸೈನಿ ಲಭ್ಯವಾಗಿದ್ದಾರೆ. ಅವರು ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆಟ್ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಮೂವರು ಅಭ್ಯಾಸದಲ್ಲಿ ತೊಡಗಿಕೊಂಡಿರುವ ಫೋಟೋಗಳನ್ನು ಟ್ವೀಟ್ ಮಾಡಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಂ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್, ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಹಾಗೂ ಶ್ರೇಯಸ್ ಐಯ್ಯರ್ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು ಎಂಬ ಸುದ್ದಿ ಹರಿದಾಡಿತ್ತು. ಅದರಂತೆ ಈ ಯಾವುದೇ ಆಟಗಾರರು ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇತ್ತ ಭಾರತದ ಉಪನಾಯಕ ಕೆಎಲ್ ರಾಹುಲ್ ಕೂಡ ವೈಯಕ್ತಿಕ ಕಾರಣಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದರು. ಈಗ ಕೆಎಲ್ ರಾಹುಲ್ ಭಾರತ ತಂಡಕ್ಕೆ ಮರಳಿದ್ದು ವಿಂಡೀಸ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿಯಲು ತಯಾರಿ ನಡೆಸುತ್ತಿದ್ದಾರೆ. ಇವರ ಜತೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದ ನವದೀಪ್ ಸೈನಿ ಕೂಡ ಇದೀಗ ವಿಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.