ಬ್ರೇಕಿಂಗ್: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ವಿಧಿವಶ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಹೃದಯಾಘಾತದಿಂದ ಇಂದು (ಶನಿವಾರ) ಮೃತಪಟ್ಟಿದ್ದಾರೆ.
62 ವಯಸ್ಸಿನ ಧ್ರುವ ನಾರಾಯಣ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಧ್ರುವನಾರಾಯಣ್ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಧ್ರುವನಾರಾಯಣ ಅವರು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಕೃಷಿ ಪದವಿ ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.
ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.