ಕೆ.ಎಸ್.ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್ ಪಾಲಿಗೆ ಹೊಸ ಅಸ್ತ್ರವಾಗಿದ್ದರೆ, ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಚಿವರ ವಿರುದ್ಧ ರಾಷ್ಟ್ರದ್ರೋಹದ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಈಶ್ವರಪ್ಪ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಇಂದು ಕೂಡ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕೆ.ಎಸ್.ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ. ಸಂಧಾನ ಸಭೆ ನಡೆಸಿದರೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಿಲ್ಲಿಸುತ್ತಿಲ್ಲ. ಈಗ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಮುಂದುವರೆಸುತ್ತೇವೆ ಎನ್ನುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಹಿತಾಸಕ್ತಿ ಮುಖ್ಯವಲ್ಲ ಎಂದು ಕಿಡಿಕಾರಿದರು.