ಪರಿಸ್ಥಿತಿ ನೋಡಿ ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ಚಿಂತನೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿಯಂತ್ರಣ ಕುರಿತು ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿ ರೂಪಿಸುವ ಬಗ್ಗೆ ಸಚಿವ ಸಂಪುಟದ ಸದಸ್ಯರ ಜತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ‘ಒಂದು ವೇಳೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿದ್ದರೆ ಮುಕ್ತ ಮನಸ್ಸು ಹೊಂದಿದ್ದೇವೆ. ಕೋವಿಡ್ ಸ್ಥಿತಿಗತಿಗೆ ಅನುಗುಣವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದೇವೆ’ ಎಂದು ತಿಳಿಸಿದ್ದಾರೆ. ‘ಕೋವಿಡ್ ಮೂರನೇ ಅಲೆ ಬಂದರೂ ಪರಿಸ್ಥಿತಿ ನಿಭಾಯಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಲವು ಮುಖ್ಯ ವಿಚಾರಗಳ ಕುರಿತು ಚರ್ಚಿಸಲು ಇಂದು (ಗುರುವಾರ) ಸಭೆ ನಡೆಸಲಾಗುತ್ತದೆ ಸಭೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್ ಅವರನ್ನು ಆಹ್ವಾನಿಸಲಾಗಿದೆ. ಅವರು ನೀಡುವ ಸಲಹೆಗಳನ್ನೂ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಬೊಮ್ಮಾಯಿ ಹೇಳಿದರು.