ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕಾರ

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕಾರ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಬುಧವಾರ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಉತ್ತರಾಧಿಕಾರಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಅಧಿಕಾರ ಹಸ್ತಾಂತರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ರಾಜ್‌ಘಾಟ್‌ಗೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. 

ಗಾಂಧಿ ಕುಟುಂಬ ಸ್ಪರ್ಧೆಯಿಂದ ಹೊರಗುಳಿದ ನಂತರ ಗ್ರ್ಯಾಂಡ್ ಓಲ್ಡ್ ಪಕ್ಷದ ಉನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ವಿರುದ್ಧ ಖರ್ಗೆ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಔಪಚಾರಿಕವಾಗಿ ಚುನಾವಣಾ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದು, ನಂತರ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.