ಮುಡಾ ಅಕ್ರಮ : ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಮುಡಾ ಅಕ್ರಮ ಕುರಿತಂತೆ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿದೆ.
ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, 1952ರ ನಿಯಮ 3 ರ ಉಪನಿಯಮ (1) ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.
ಈ ಹಿನ್ನಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act, 1952ರ ನಿಯಮ 3ರ ಉಪನಿಯಮ (1)ರನ್ವಯ ಪುದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ, ರವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ ಅಂತ ಹೇಳಿದ್ದಾರೆ.
ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ/ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು/ಆರ್ಥಿಕ ಸಲಹೆಗಾರರು/ ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸಹಕರಿಸತಕ್ಕದ್ದು ಅಂತ ತಿಳಿಸಿದ್ದಾರೆ.