ಕಳಚಿದ ಸಂಗೀತ ಲೋಕದ ಕೊಂಡಿ - ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಇನ್ನಿಲ್ಲ

ಕೋಲ್ಕೊತಾ : ಸಂಗೀತ ಮಾಂತ್ರಿಕ, ಶಾಸ್ತ್ರೀಯ ಸಂಗೀತದಲ್ಲಿ ಮೇರು ಸಾಧನೆಗೈದ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಶೀದ್ ಖಾನ್ (55) ಕೋಲ್ಕೊತ್ತಾದ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ (ಜನನೇಂದ್ರೀಯಕ್ಕೆ ಸಂಬಂಧಿಸಿದ ಒಂದು ಗ್ರಂಥಿ) ಬಳಲುತ್ತಿದ್ದ ಉಸ್ತಾದ್ ರಶೀದ್ ಖಾನ್ ಅವರನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕೋಲ್ಕೊತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಕ್ಯಾನ್ಸರ್ ಪ್ರಮಾಣವು ಫೈನಲ್ ಸ್ಟೇಜ್‌ನಲ್ಲಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರವೀಂದ್ರ ಸದನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ಜನವರಿ 10 ಬುಧವಾರದಂದು ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.