ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ಅಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಬಗ್ಗೆ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ. ಈ ಮೂಲಕ ಹಿಜಾಬ್ ಕುರಿತಾಗಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಶುರುವಾಗಿತ್ತು. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ಬೇಡಿಕೆ ಶುರುವಾಗಿತ್ತು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಹಿಜಾಬ್‌ಗೆ ಅವಕಾಶ ನಿರಾಕರಿಸಿದ ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೂ ಹಿಜಾಬ್ ಧರಿಸಿದವರಿಗೆ ಕಾಲೇಜಿನಲ್ಲಿ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಈ ಘಟನೆಯ ಒಂದು ತಿಂಗಳ ನಂತರ ಅಲ್ಮಾಸ್ ಎಂಬ ವಿದ್ಯಾರ್ಥಿನಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕಾರಣಕ್ಕೆ ಇಡೀ ರಾಜ್ಯದಲ್ಲಿ ಧರ್ಮ ಸಂಘರ್ಷವೇ ನಡೆದಿತ್ತು.