ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಯಾಪ್ಟನ್ ಅಮರೀಂದರ್ ಸಿಂಗ್

2022ರಲ್ಲಿ ಪಂಜಾಬ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಪಂಜಾಬ್ನಲ್ಲಿ ನಾಯಕತ್ವ ಬದಲಾವಣೆ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಸಿಎಂ ಅಮರೀಂದರ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಅಮರೀಂದರ್ ಸಿಂಗ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ನಾಯಕತ್ವ ಬದಲಾವಣೆ ಆಗ್ರಹಿಸಿ 40 ಕಾಂಗ್ರೆಸ್ ಶಾಸಕರು ಹೈಕಮಾಂಡ್ ಗೆ ಪತ್ರ ಬರೆದು ಒತ್ತಡ ಹೇರಿದ್ದರು. ಇದರ ನಂತರ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜಭವನಕ್ಕೆ ತೆರಳಿರುವ ಅಮರೀಂದರ್ ಸಿಂಗ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.