ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

ನವದೆಹಲಿ: ಹಾಲಿ ಸಿಜೆಐ ಡಿ.ವೈ ಚಂದ್ರಚೂಡ್ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ನೇಮಕಾತಿ ನವೆಂಬರ್ 11ರಿಂದ ಜಾರಿಗೆ ಬರಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನವೆಂಬರ್ 11 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸಂತೋಷಪಡುತ್ತಾರೆ ಎಂದು ತಿಳಿಸಿದ್ದಾರೆ.