ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಾತಿ

ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, 'ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) 10 ಸಾವಿರ ಹುದ್ದೆ ಮತ್ತು ಕಲ್ಯಾಣ ಕರ್ನಾಟಕ ವೃಂದದ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು' ಎಂದು ತಿಳಿಸಿದ್ದಾರೆ. ‘ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲೂ ನಿರ್ಧರಿಸಲಾಗಿದೆ’ ಎಂದು ಸಚಿವರು ಮಾಹಿತಿ ನೀಡಿದ್ದಾರೆ.