2ನೇ ಹಂತದ 88 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಇಂದಿನಿಂದ

2ನೇ ಹಂತದ 88 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಇಂದಿನಿಂದ

ನವದೆಹಲಿ : 2024ನೇ ಸಾಲಿನ ಲೋಕಸಭಾ ಚುನಾವಣೆ ಹಿನ್ನೆಲೆ ಒಟ್ಟು ಏಳು ಹಂತಗಳ ಪೈಕಿ ಎರಡನೇ ಹಂತದ ಚುನಾವಣೆಗಾಗಿ ದೇಶದ 88 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಕಾರ್ಯ ಇಂದಿನಿಂದ (ಮಾ.28) ಆರಂಭವಾಗಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತದೆ. 

ಕರ್ನಾಟಕವೂ ಸೇರಿದಂತೆ ಕೇರಳ, ಅಸ್ಸಾಂ, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ, ಮಣಿಪುರದ ಒಂದು ಭಾಗ, ಒಂದು ಕೇಂದ್ರಾಡಳಿತ ಪ್ರದೇಶಗಳಿಗೆ ಎರಡನೇ ಹಂತದ ಚುನಾವಣೆ ನಡೆಯಲಿದೆ. 

ಏ.19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. 
ಇನ್ನು, ಎರಡನೇ ಹಂತದಲ್ಲಿ ಬರುವ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26 ರಂದು ಮೊದಲ ಹಂತ ಹಾಗೂ ಮೇ.7ರಂದು ಎರಡನೇ ಹಂತದ ಚುನಾವಣೆ ನಿಗದಿಯಾಗಿದೆ. 

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದ 14 ಕ್ಷೇತ್ರಗಳಿಗೆ ಮಾ.28 ರಂದು ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ನಾಮಪತ್ರವನ್ನು ಹಿಂಪಡೆಯಲು ಏಪ್ರಿಲ್ 8 ಕಡೆಯ ದಿನವಾಗಿದೆ. 

ಮೊದಲ ಹಂತದಲ್ಲಿ ಬರುವ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್, ಉಡುಪಿ-ಚಿಕ್ಕಮಗಳೂರು, ತುಮಕೂರು, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಹೊರ ಬರಲಿದೆ. 

ಇಂದಿನಿಂದಲೇ ಸೆ.144 ಜಾರಿ 

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆ ನಾಮಪತ್ರಗಳನ್ನು ಸ್ವೀಕರಿಸುವ ಎಲ್ಲ ಚುನಾವಣಾ ಕೇಂದ್ರಗಳ ಸುತ್ತಮುತ್ತ 100 ಮೀಟರ್ ಗಳ ವ್ಯಾಪ್ತಿಯಲ್ಲಿ ಸಿಆರ್ ಪಿಸಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ತಿಳಿಸಿದ್ದಾರೆ. ಮಾ.28ರ ಬೆಳಗ್ಗೆ 10 ರಿಂದ ಏಪ್ರಿಲ್ 8ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ. ಅದಕ್ಕಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.