ಧಾರವಾಡ: ಮಾರ್ಚ್ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಿದ್ಧತೆ ಮಾಡಿಕೊಳ್ಳುತ್ತಿರುವ ಶಿಕ್ಷಣ ಇಲಾಖೆ

ಧಾರವಾಡ: ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜರುಗಲಿದ್ದು, 29,929 ವಿದ್ಯಾರ್ಥಿಗಳು ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆಯಲಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಧಾರವಾಡ ಶಹರದಲ್ಲಿ 34, ಹುಬ್ಬಳ್ಳಿ ಶಹರದಲ್ಲಿ 16, ಧಾರವಾಡ ಗ್ರಾಮೀಣದಲ್ಲಿ 14, ಹುಬ್ಬಳ್ಳಿ ಗ್ರಾಮೀಣದಲ್ಲಿ 13, ಕಲಘಟಗಿಯಲ್ಲಿ 8, ಕುಂದಗೋಳದಲ್ಲಿ 7, ನವಲಗುಂದದಲ್ಲಿ 9 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು ಜಿಲ್ಲೆಯಾದ್ಯಂತ 101 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಿ ಕೊಠಡಿಗಳಿಗೆ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಪ್ರತಿಯೊಂದು ತಾಲೂಕಿನ ಪರೀಕ್ಷಾ ಕೇಂದ್ರಗಳ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಉಪನಿರ್ದೇಶಕರ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಗ್ರೂಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷಾ ದಿನದಂದು ಜಿಲ್ಲಾಧಿಕಾರಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಪೊಲೀಸ್ ಆಯುಕ್ತರು ಸಿಆರ್‌ಪಿಸಿ ಸೆಕ್ಷನ್ 144 ಕಲಂನ್ನು ಜಾರಿಗೊಳಿಸಿದ್ದಾರೆ. ಧಾರವಾಡ ಗ್ರಾಮೀಣ ಜಿಲ್ಲೆ ಹಾಗೂ ಮಹಾನಗರದ ಪರೀಕ್ಷಾ ಕೇಂದ್ರದಗಳ ಸುತ್ತ 200 ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷಾ ದಿನದಂದು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ದಾದಿಯರನ್ನು ನೇಮಕಾತಿ ಮಾಡಿದೆ. ಜಿಲ್ಲೆಯ ಹೆಸ್ಕಾಂಗೆ ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆಯಾಗದಂತೆ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.