ರಾಜ್ಯಕ್ಕೂ ತಟ್ಟಿದ ಮ್ಯಾಂಡೌಸ್ ಎಫೆಕ್ಟ್

ರಾಜ್ಯಕ್ಕೂ ತಟ್ಟಿದ ಮ್ಯಾಂಡೌಸ್ ಎಫೆಕ್ಟ್

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ, ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ ದಾಖಲು
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮ್ಯಾಂಡೌಸ್​​ ಚಂಡಮಾರುತ ಹಿನ್ನೆಲೆಯಲ್ಲಿ ಈಗಾಗಲೇ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರಲ್ಲೂ ರಾತ್ರಿಯಿಡೀ ಜಿಟಿಜಿಟಿ ಮಳೆಯಾಗಿದ್ದು, ಬೆಳಿಗ್ಗೆಯೂ ಮುಂದುವರಿದಿದೆ. ಇಂದು ದಿನಪೂರ್ತಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನ ಕೂಡ ಇಳಿಕೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ನಾಳೆ, ನಾಡಿದ್ದು ಗುಡುಗು ಸಹಿತ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. 

ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ (6.6 ಡಿಗ್ರಿ ಸೆಲ್ಶಿಯಸ್) ದಾಖಲಾಗಿದೆ. 

ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕರಾವಳಿ, ಉತ್ತರ ಒಳನಾಡಿಗೆ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.