ಇಂದು ರಾಜ್ಯದ 28 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಮೊನ್ನೆ ತಾನೆ ಬಿಜೆಪಿ 195 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕರ್ನಾಟಕ, ತೆಲಂಗಾಣ ಸೇರಿದಂತೆ ಮೊದಲಾದ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.
ಈ ನಿಟ್ಟಿನಲ್ಲಿ ಕರ್ನಾಟಕ, ತೆಲಂಗಾಣ ರಾಜ್ಯದ ಬಿಜೆಪಿ ಉಸ್ತುವಾರಿಗಳು, ಕೇಂದ್ರ ಚುನಾವಣಾ ಸಮಿತಿ ಸದಸ್ಯರು, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರು ಈಗಾಗಲೇ ದೆಹಲಿ ತಲುಪಿದ್ದು, ಕರ್ನಾಟಕದಿಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಅವರೂ ನಿನ್ನೆಯೇ ದೆಹಲಿಯನ್ನು ತಲುಪಿದ್ದಾರೆ.
ಇಂದು ನಡೆಯಲಿರುವ ಉನ್ನತ ಮಟ್ಟದ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗಿಯಾಗಲಿದ್ದಾರೆಂದು ದೆಹಲಿಯ ಉನ್ನತ ಮೂಲಗಳು ತಿಳಿಸಿವೆ.
ಇನ್ನು, ಇಂದು ಆರಂಭವಾಗಲಿರುವ ಸಭೆಯಲ್ಲಿ ಕರ್ನಾಟಕದ ಎಲ್ಲ 28 ಲೋಕಸಭೆ ಸ್ಥಾನಗಳಿಗೆ ಬಿಜೆಪಿ-ಜೆಡಿಎಸ್ ಬೆಂಬಲಿತ ಎನ್ ಡಿಎ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಈ ಬಗ್ಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ರಾಜ್ಯದ ಇಪ್ಪತ್ತೆಂಟು ಅಭ್ಯರ್ಥಿಗಳ ಪಟ್ಟಿ ಈಗಾಗಲೇ ನಮ್ಮ ವರಿಷ್ಠರ ಬಳಿ ಇದ್ದು, ಇಂದು ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಅದನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದಿದ್ದಾರೆ.
16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶದ ಕ್ಷೇತ್ರಗಳು ಸೇರಿದಂತೆ ಒಟ್ಟು 195 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಸ್ಮೃತಿ ಇರಾನಿ ಸೇರಿದಂತೆ ಮೊದಲಾದವರ ಹೆಸರುಗಳು ಮೊದಲ ಪಟ್ಟಿಯಲ್ಲಿದ್ದವು.
ಇತ್ತ, ಕಾಂಗ್ರೆಸ್ ನಲ್ಲೂ ಲೋಕಸಭೆ ಚುನಾವಣೆ ಹಿನ್ನೆಲೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲು ಸನ್ನದ್ಧವಾಗಿದ್ದು, ಗುರುವಾರ (ಮಾರ್ಚ್ 7)ರಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಏರ್ಪಾಡಾಗಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಕರ್ನಾಟಕ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಸಂಜೆ ದೆಹಲಿಗೆ ಹಾರಲಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.