ಬೆಂಗಳೂರಿನಲ್ಲಿ ಅತ್ಯಾಧುನಿಕ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಸೌಲಭ್ಯದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸಚಿವ ಜೋಶಿ ಶಿಲಾನ್ಯಾಸ

ಬೆಂಗಳೂರು: ಬೆಂಗಳೂರಿನ ನ್ಯಾಷನಲ್ ಟೆಸ್ಟಿಂಗ್ ಹೌಸ್‌ನಲ್ಲಿ, ಹೊಸ, ಅತ್ಯಾಧುನಿಕ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಸೌಲಭ್ಯದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶಿಲಾನ್ಯಾಸ ನೆರವೇರಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಸಚಿವ ಜೋಶಿ ಅವರು, 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ರಯೋಗಾಲಯವು ಅತ್ಯಾಧುನಿಕ ಪರೀಕ್ಷಾ ಸಾಧನಗಳನ್ನು ಹೊಂದಿರಲಿದ್ದು, ಸಮಗ್ರ ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯವನ್ನು ಹೊಂದಲು ಸಜ್ಜಾಗಿದೆ. ಇದು ಭಾರತದ ಎಲೆಕ್ಟ್ರಿಕ್ ವಾಹನಗಳ ವ್ಯವಸ್ಥೆಯನ್ನು ಸದೃಢಗೊಳಿಸುವುದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ಸುಸ್ಥಿರ ಭವಿಷ್ಯದ ಅನ್ವೇಷಣೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ನಿಕಟ ಸಂಬಂಧದ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಹಸಿರು ಮನೆ ಅನಿಲಗಳ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ನಮ್ಮ ನಮ್ಮೆಲ್ಲರ ಗುರಿಯೆಡೆಗೆ ದಿಟ್ಟ ಹೆಜ್ಜೆ ಹಾಕಲು ಎಲ್ಲಾ ಮಧ್ಯಸ್ಥಗಾರರನ್ನು ಆಗ್ರಹಿಸಿದೆನು ಎಂದು ಹೇಳಿದ್ದಾರೆ.