ದೆಹಲಿಗೆ ತೆರಳುವ ಮುನ್ನ ಯಡಿಯೂರಪ್ಪ- ಬೊಮ್ಮಾಯಿ ಭೇಟಿ: ಮಹತ್ವದ ಚರ್ಚೆ

ದೆಹಲಿಗೆ ತೆರಳುವ ಮುನ್ನ ಯಡಿಯೂರಪ್ಪ- ಬೊಮ್ಮಾಯಿ ಭೇಟಿ: ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. "ಈ ಬಾರಿಯೂ ಬಿಜೆಪಿ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿ ಸ್ಥಾನಕ್ಕೆ ಏರಲಿದ್ದಾರೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದರು. ಸಿಎಂ ದೆಹಲಿ ಭೇಟಿ ವೇಳೆಯಲ್ಲೇ ಅವರು ಈ ಮಾತು ಹೇಳಿದ್ದು ಹಾಗೂ ಶಾಸಕ ಯತ್ನಾಳ್ ಹೇಳಿಕೆಗಳು ಕೂಡ ಮತ್ತಷ್ಟು ಚರ್ಚೆಗೆ ಕಾರಣವಾಗಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಸೋಮವಾರ (ಫೆ.07) ಬಿಜೆಪಿ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದಾರೆ. ಅದಕ್ಕೂ ಮುನ್ನ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ನಿನ್ನೆ ಫೆ.06 ರಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾವೇರಿ ನಿವಾಸದಲ್ಲಿ ಇರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಸಂಸದ ರಾಘವೇಂದ್ರ ಕೂಡ ಚರ್ಚೆಯಲ್ಲಿ ಭಾಗಿಯಾಗಿದ್ದರು. ನಿಗಮ ಮಂಡಳಿಗಳ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬೆಂಬಲಿಗರು ಹೆಚ್ಚಾಗಿದ್ದಾರೆ.